ಬೆಂಗಳೂರಿನಲ್ಲಿ ಸಿಸಿಬಿ ಮಾದಕ ದ್ರವ್ಯ ನಿಗ್ರಹ ದಳದ ಅಧಿಕಾರಿಗಳು ಎರಡು ಪ್ರತ್ಯೇಕ ಕಡೆ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಬರೋಬ್ಬರಿ 23 ಕೋಟಿ ರೂಪಾಯಿ ಮೌಲ್ಯದ ನಿಷೇಧಿತ ಮಾದಕ ವಸ್ತುಗಳನ್ನು ವಶಪಡಿಸಿಕೊಂಡಿರುವ ಅಧಿಕಾರಿಗಳು, ಮೂವರು ವಿದೇಶಿ ಪ್ರಜೆಗಳು ಸೇರಿದಂತೆ ಒಟ್ಟು ನಾಲ್ಕು ಜನ ಡ್ರಗ್ ಪೆಡ್ಲರ್ಗಳನ್ನು ಕಂಬಿ ಎಣಿಸುವಂತೆ ಮಾಡಿದ್ದಾರೆ.ಮೊದಲ ಕಾರ್ಯಾಚರಣೆ ಬೆಂಗಳೂರಿನ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಇಲ್ಲಿನ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಆಫ್ರಿಕಾ ಮೂಲದ ಪ್ರಜೆಗಳು ಡ್ರಗ್ಸ್ ದಂಧೆಯಲ್ಲಿ ತೊಡಗಿದ್ದಾರೆಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪಿಐ ಪ್ರವೀಣ್ ಸಿ. ಯಲಿಗಾರ್ ನೇತೃತ್ವದ ತಂಡ ದಾಳಿ ನಡೆಸಿದೆ.
ಈ ವೇಳೆ ಅಕ್ರಮವಾಗಿ ವಾಸವಿದ್ದ ಮೂವರು ನೈಜೀರಿಯಾ ದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಇವರಿಂದ 21 ಕೋಟಿ ರೂಪಾಯಿ ಮೌಲ್ಯದ 10.270 ಕೆಜಿ ತೂಕದ ಎಂಡಿಎಂಎ ಕ್ರಿಸ್ಟಲ್ (MDMA Crystal), ಒಂದು ದ್ವಿಚಕ್ರ ವಾಹನ ಹಾಗೂ 5 ಮೊಬೈಲ್ ಫೋನ್ಗಳನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಗಳು ಮೆಡಿಕಲ್ ಮತ್ತು ಟೂರಿಸ್ಟ್ ವೀಸಾ ಪಡೆದು ಭಾರತಕ್ಕೆ ಬಂದಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದರು. ಇವರು ದೆಹಲಿಯಲ್ಲಿದ್ದ ನೈಜೀರಿಯಾ ಮೂಲದವರಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿಸಿ, ಬೆಂಗಳೂರಿನ ಸ್ಥಳೀಯ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಿ ಅಕ್ರಮ ಹಣ ಸಂಪಾದಿಸುತ್ತಿದ್ದರು ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಇನ್ನು ಎರಡನೇ ಕಾರ್ಯಾಚರಣೆ ಬಾಣಸವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕೇರಳ ಮೂಲದ ವ್ಯಕ್ತಿಗಳು ಹೈಡ್ರೋ ಗಾಂಜಾ ಮಾರಾಟ ಮಾಡುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಪಿಐ ಸಿ.ಎ. ಮಂಜಪ್ಪ ಮತ್ತು ತಂಡ ದಾಳಿ ನಡೆಸಿ ಕೇರಳದ ಓರ್ವ ಪೆಡ್ಲರ್ನನ್ನು ಬಂಧಿಸಿದೆ.
ಬಂಧಿತನಿಂದ 2 ಕೋಟಿ ರೂಪಾಯಿ ಮೌಲ್ಯದ 2.044 ಕೆಜಿ ಹೈಡ್ರೋ ಗಾಂಜಾ ಹಾಗೂ ಒಂದು ಮೊಬೈಲ್ ಫೋನ್ ವಶಪಡಿಸಿಕೊಳ್ಳಲಾಗಿದೆ. ಈತ ಬೆಂಗಳೂರಿನಲ್ಲಿ ಖಾಸಗಿ ಟ್ರೇಡಿಂಗ್ ಕೆಲಸ ಮಾಡಿಕೊಂಡಿದ್ದು, ಕೇರಳದಿಂದ ಹೈಡ್ರೋ ಗಾಂಜಾ ತಂದು ಇಲ್ಲಿನ ಪರಿಚಯಸ್ಥ ಗ್ರಾಹಕರಿಗೆ ದುಬಾರಿ ಬೆಲೆಗೆ ಮಾರಿ ಮೋಜಿನ ಜೀವನ ನಡೆಸುತ್ತಿದ್ದನು. ಈ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಮತ್ತೊಬ್ಬ ಆರೋಪಿಗಾಗಿ ಸಿಸಿಬಿ ಪೊಲೀಸರು ಹುಡುಕಾಟ ಮುಂದುವರಿಸಿದ್ದಾರೆ.
ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸೀಮಂತಕುಮಾರ್ ಸಿಂಗ್ ಅವರ ಮಾರ್ಗದರ್ಶನದಲ್ಲಿ, ಅಪರ ಪೊಲೀಸ್ ಆಯುಕ್ತರಾದ ಅಜಯ್ ಹಿಲೋರಿ, ಉಪ ಪೊಲೀಸ್ ಆಯುಕ್ತರಾದ ರಾಜಾ ಇಮಾಮ್ ಖಾಸಿಂ ನೇತೃತ್ವದಲ್ಲಿ ಎಸಿಪಿ ಎಲ್.ವೈ. ರಾಜೇಶ್, ಪಿಐಗಳಾದ ಪ್ರವೀಣ್ ಯಲಿಗಾರ್, ಮಂಜಪ್ಪ ಸಿ.ಎ. ಮತ್ತು ತಂಡದ ಸಿಬ್ಬಂದಿಗಳು ಈ ಯಶಸ್ವಿ ಕಾರ್ಯಾಚರಣೆಯನ್ನು ನಡೆಸಿದ್ದಾರೆ. ಸಿಸಿಬಿ ಪೊಲೀಸರ ಈ ಭರ್ಜರಿ ಬೇಟೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.










