ಬಂಡೇಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ, ನಿಷೇಧಿತ ಮಾದಕ ವಸ್ತುವಾದ ಎಂ.ಡಿ.ಎಂ.ಎ ಮಾತ್ರೆಗಳು ಮತ್ತು ಕೊಕೇನ್ ಪೌಡರ್ ಮಾರಾಟ ಮಾಡುತ್ತಿದ್ದ ಓರ್ವ ವಿದೇಶಿ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ.
ದಿನಾಂಕ: 30/10/2025 ರಂದು ಬಂದ ಖಚಿತ ಮಾಹಿತಿಯ ಮೇರೆಗೆ ಬಂಡೇಪಾಳ್ಯ ಪೊಲೀಸರು ಸೋಮಸಂದ್ರಪಾಳ್ಯ ಕೆರೆಯ ಬಳಿ ದಾಳಿ ನಡೆಸಿ, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.
ಆರೋಪಿಯಿಂದ 752 ಗ್ರಾಂ ಎಂ.ಡಿ.ಎಂ.ಎ ಮಾತ್ರೆಗಳು ಮತ್ತು 8 ಗ್ರಾಂ 37ಮಿಲಿ ಕೊಕೇನ್ ಪೌಡರ್ ಜೊತೆಗೆ ಕೃತ್ಯಕ್ಕೆ ಬಳಸಿದ್ದ ದ್ವಿ-ಚಕ್ರ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
ವಶಪಡಿಸಿಕೊಂಡ ಮಾದಕ ವಸ್ತುಗಳ ಅಂದಾಜು ಮೌಲ್ಯ 75 ಲಕ್ಷರೂಪಾಯಿಗಳು.
ಆರೋಪಿಯು 2018ರಲ್ಲಿ ವ್ಯಾಪಾರ ವೀಸಾದ ಮೇಲೆ ಭಾರತಕ್ಕೆ ಬಂದಿದ್ದು, ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಮಾದಕ ವಸ್ತುಗಳನ್ನು ಖರೀದಿ ಮಾಡಿ, ಕಾಲೇಜು ವಿದ್ಯಾರ್ಥಿಗಳು ಹಾಗೂ ಗ್ರಾಹಕರಿಗೆ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.
ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿ, ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ಪೊಲೀಸ್ ಇನ್ಸ್‌ಪೆಕ್ಟರ್ ಶ್ರೀ.ಮಹೇಶ್ ಕನಕಗಿರಿ ನೇತೃತ್ವದ ತಂಡವು ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದೆ.









