ಬೆಂಗಳೂರು ನಗರ ಪೊಲೀಸರ ಸಿಸಿಬಿ (ಕೇಂದ್ರ ಅಪರಾಧ ವಿಭಾಗ) ಸಂಘಟಿತ ಅಪರಾಧ ದಳವು ಮಹತ್ವದ ಕಾರ್ಯಾಚರಣೆಯೊಂದನ್ನು ನಡೆಸಿ, ಹೊರ ರಾಜ್ಯಗಳಿಂದ ಅಕ್ರಮವಾಗಿ ನಾಡಬಂದೂಕು, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಖರೀದಿಸಿ ಮಾರಾಟ ಮಾಡುತ್ತಿದ್ದ ಜಾಲವನ್ನು ಭೇದಿಸಿದೆ.
ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿ ವ್ಯಕ್ತಿಯೊಬ್ಬನು ಹೊರ ರಾಜ್ಯದಿಂದ ನಾಡಬಂದೂಕು, ಪಿಸ್ತೂಲ್ ಮತ್ತು ಮದ್ದುಗುಂಡುಗಳನ್ನು ಕಡಿಮೆ ಬೆಲೆಗೆ ಖರೀದಿಸಿ, ಅಕ್ರಮವಾಗಿ ತನ್ನ ಸ್ವಾಧೀನದಲ್ಲಿಟ್ಟುಕೊಂಡು, ನಂತರ ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ಲಭ್ಯವಾಗಿತ್ತು. ಇದರಂತೆ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡರು. ನಂತರ ಡಿ.ಜೆ ಹಳ್ಳಿಯ ಸ್ವತಂತ್ರನಗರದ ಮುಖ್ಯ ರಸ್ತೆಯ ಬಳಿ, ಕೆ.ಜಿ ಹಳ್ಳಿ ಪೊಲೀಸ್ ಠಾಣೆಯ ರೌಡಿಯನ್ನು ಒಂದು ಬ್ಯಾಗ್‌ನೊಂದಿಗೆ ವಶಕ್ಕೆ ಪಡೆದರು. ಆತ ಹೊಂದಿದ್ದ ಬ್ಯಾಗ್ ಅನ್ನು ಪರಿಶೀಲಿಸಿದಾಗ, ಅದರಲ್ಲಿ ಒಂದು ನಾಡಬಂದೂಕು, ಒಂದು ಪಿಸ್ತೂಲ್ ಮತ್ತು ಎರಡು ಜೀವಂತ ಗುಂಡುಗಳು ಪತ್ತೆಯಾಗಿದ್ದವು. ಜೊತೆಗೆ ಈತನಿಗೆ ಶಸ್ತ್ರಾಸ್ತ್ರಗಳನ್ನು ಪೂರೈಸುತ್ತಿದ್ದ ಪಂಜಾಬ್ ರಾಜ್ಯದ ತೇಜ್ ಬಹದ್ದೂರ್ ನಗರದ ನಿವಾಸಿ ಒಬ್ಬನನ್ನು ವಶಕ್ಕೆ ಪಡೆಯಲಾಯಿತು.
ಈ ಯಶಸ್ವಿ ಕಾರ್ಯಾಚರಣೆಯನ್ನು ಕೇಂದ್ರ ಅಪರಾಧ ವಿಭಾಗದ ಸಂಘಟಿತ ಅಪರಾಧ ದಳ (ಪೂರ್ವ) ವಿಭಾಗದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ನಡೆಸಿದ್ದಾರೆ. ಈ ಕಾರ್ಯಾಚರಣೆಯು ಬೆಂಗಳೂರು ನಗರದಲ್ಲಿ ಅಕ್ರಮ ಶಸ್ತ್ರಾಸ್ತ್ರಗಳ ಮಾರಾಟ ಮತ್ತು ಸಾಗಣೆಗೆ ಕಡಿವಾಣ ಹಾಕುವಲ್ಲಿ ಮಹತ್ವದ ಹೆಜ್ಜೆಯಾಗಿದೆ. ಪೊಲೀಸರ ಈ ದಕ್ಷ ಕ್ರಮವು ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಅವರ ಬದ್ಧತೆಯನ್ನು ಎತ್ತಿ ಹಿಡಿದಿದೆ.ವರದಿ :- ಮೋಹನ್ ಕುಮಾರ್ ಎಸ್ ನಾಯ್ಕ್









