ಕಾಫಿನಾಡು ಚಿಕ್ಕಮಗಳೂರಿನಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಕಲ್ಲು ತೂರಾಟದ ಘಟನೆ ಈಗ ಸಂಘರ್ಷಕ್ಕೆ ಕಾರಣವಾಗಿದೆ. ನಗರದ ವಿಜಯನಗರ ಬಡಾವಣೆಯಲ್ಲಿ ಹಿಂದೂ ಮನೆಯೊಂದರ ಮೇಲೆ ನಿರಂತರ ಕಲ್ಲು ತೂರಾಟ ನಡೆದ ಬೆನ್ನಲ್ಲೇ, ಎರಡು ಸಮುದಾಯಗಳ ನಡುವೆ ಉದ್ವಿಗ್ನತೆ ಸೃಷ್ಟಿಯಾಗಿದ್ದು, ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ವಿಜಯನಗರ ಬಡಾವಣೆಯ ತಿಲಕ್ ಪಾರ್ಕ್ ಸಮೀಪದ ಗಗನ್ ಎಂಬುವವರ ಮನೆಯ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ರಾತ್ರಿ ವೇಳೆ ಕಲ್ಲು ತೂರಾಟ ನಡೆಸುತ್ತಿದ್ದರು. ಇದರಿಂದ ಮನೆಯವರು ಭೀತಿಯಲ್ಲಿ ಕಾಲ ಕಳೆಯುವಂತಾಗಿತ್ತು.
ಸೋಮವಾರ ರಾತ್ರಿ ಮತ್ತೆ ಕಲ್ಲು ಎಸೆದಾಗ, ಮನೆಯವರು ಮತ್ತು ಸ್ಥಳೀಯ ಬಜರಂಗದಳ ಕಾರ್ಯಕರ್ತರು ಕೆಲವು ಮುಸ್ಲಿಂ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ನಡೆದ ಘರ್ಷಣೆಯಲ್ಲಿ ಇಬ್ಬರು ಯುವಕರು ಗಾಯಗೊಂಡಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬಜರಂಗದಳದವರು ತಮ್ಮ ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ ಎಂದು ಎಸ್‌ಡಿಪಿಐ ಮುಖಂಡರು ಆರೋಪಿಸಿದ್ದರೆ, ಮನೆ ಮೇಲೆ ಕಲ್ಲು ತೂರುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಹಿಂದೂ ಸಂಘಟನೆಗಳು ಒತ್ತಾಯಿಸಿವೆ.
ಬಸವನಹಳ್ಳಿ ಪೊಲೀಸ್ ಠಾಣೆ ಎದುರು ಎರಡೂ ಸಮುದಾಯದವರು ಜಮಾಯಿಸಿದ್ದರಿಂದ ಪರಿಸ್ಥಿತಿ ಕೈಮೀರುವ ಮುನ್ಸೂಚನೆ ಇತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು, ಹೆಚ್ಚುವರಿ ಪೊಲೀಸ್ ಪಡೆ (MSP) ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ.
ಸದ್ಯ ನಗರದ ಆಸ್ಪತ್ರೆ ಮತ್ತು ಪೊಲೀಸ್ ಠಾಣೆ ಸುತ್ತಮುತ್ತ ಬಿಗಿ ಭದ್ರತೆ ಮುಂದುವರಿದಿದ್ದು, ಪೊಲೀಸರು ಪ್ರಕರಣದ ತನಿಖೆ ಕೈಗೊಂಡಿದ್ದಾರೆ. ಸಾರ್ವಜನಿಕರು ಶಾಂತಿ ಕಾಪಾಡುವಂತೆ ಮನವಿ ಮಾಡಲಾಗಿದೆ.









